ಬೆಂಗಳೂರು/ಜೈಪುರ: ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ ಬೆಂಗಳೂರು ಎಚ್‌ಎಎಲ್ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಲಂಚ ಸ್ವೀಕರಿಸುವ ವೇಳೆ ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ.
ಎಚ್‌ಎಎಲ್ ಪೊಲೀಸ್ ಠಾಣೆಯ ಪಿಎಸ್‌ಐ ಅನಿತಾ, ಹೆಡ್ ಕಾನ್ಸ್‌ಟೇಬಲ್ ಉಳುವಪ್ಪ ಹಾಗೂ ಕಾನ್ಸ್‌ಟೇಬಲ್ ಯತೀಶ್ ಕಳೆದ ಶುಕ್ರವಾರ ಪ್ರಕರಣದ ಆರೋಪಿಯನ್ನು ಬಂಧಿಸುವ ಉದ್ದೇಶದಿಂದ ಜೈಪುರಕ್ಕೆ ತೆರಳಿದ್ದರು. ಬಂಧನ ಪ್ರಕ್ರಿಯೆ ವೇಳೆ ಆರೋಪಿಯಿಂದ ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಈ ಕುರಿತು ದೂರು ಸ್ವೀಕರಿಸಿದ ರಾಜಸ್ಥಾನ ಎಸಿಬಿ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು. ಆರೋಪಿಯಿಂದ ಮೊದಲ ಕಂತಿನ ₹40 ಸಾವಿರ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಪಿಎಸ್‌ಐ ಅನಿತಾ ಸೇರಿದಂತೆ ಮೂವರು ಪೊಲೀಸರು ಎಸಿಬಿ ಅಧಿಕಾರಿಗಳಿಗೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದರು.
ರಾಜಸ್ಥಾನ ಎಸಿಬಿಯ ಎಎಸ್‌ಪಿ ಭೂಪೇಂದ್ರ ಚೌಧರಿ ನೇತೃತ್ವದಲ್ಲಿ ನಡೆದ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಮೂವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆ ಕುರಿತು ಜೈಪುರ ಎಸಿಬಿ ಅಧಿಕಾರಿಗಳು ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಆರೋಪಿ ಬಂಧನಕ್ಕೆ ತೆರಳಿದ್ದ ಪೊಲೀಸ್ ತಂಡವೇ ಲಂಚ ಪ್ರಕರಣದಲ್ಲಿ ಸಿಲುಕಿರುವುದು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಪ್ರಕರಣದ ಎಲ್ಲಾ ಆಯಾಮಗಳ ಕುರಿತು ಎಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಈ ಬೆಳವಣಿಗೆ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆಯುಂಟು ಮಾಡಿದ್ದು, ಮುಂದಿನ ಕ್ರಮದ ಬಗ್ಗೆ ಕುತೂಹಲ ಮೂಡಿಸಿದೆ.