ಹುಬ್ಬಳ್ಳಿ, ಜೂನ್ 14: ನಗರದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶನಗರ ಪ್ರದೇಶದಲ್ಲಿ ಇರುವ ಬೇಕರಿಯೊಂದರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಮಾಲೀಕನ ಮೇಲೆ ಹಲ್ಲೆ ಮಾಡಿ ಅಂಗಡಿಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಗಣೇಶನಗರದ ಪವನ್ ಸ್ಕೂಲ್ ಸಮೀಪದ ಮಗವಿರ ಬೇಕರಿಗೆ ನುಗ್ಗಿದ ಕೆಲವರು ಮೊದಲು ಬೇಕರಿ ಮಾಲೀಕರೊಂದಿಗೆ ವಾಗ್ವಾದ ನಡೆಸಿದ್ದಾರೆ. ಮಾತಿನ ಚಕಮಕಿ ತಾರಕಕ್ಕೇರಿದ ವೇಳೆ ದುಷ್ಕರ್ಮಿಗಳು ಮಾಲೀಕನಿಗೆ ಹಲ್ಲೆ ನಡೆಸಿದ್ದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.
ಇದರಿಂದಲೂ ತೃಪ್ತರಾಗದ ಆರೋಪಿಗಳು ಅಂಗಡಿಯೊಳಗಿದ್ದ ಆಹಾರ ಪದಾರ್ಥಗಳು, ಗಾಜಿನ ಸಾಮಗ್ರಿಗಳು ಹಾಗೂ ಇತರ ವಸ್ತುಗಳನ್ನು ಧ್ವಂಸಗೊಳಿಸಿ ಸ್ಥಳದಲ್ಲಿ ದಾಂಧಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಯಿಂದ ಗಾಯಗೊಂಡ ಬೇಕರಿ ಮಾಲೀಕರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಜಮಾಯಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮಾಹಿತಿ ಪಡೆದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದು, ತನಿಖೆ ಮುಂದುವರಿದಿದೆ.
ಸ್ಥಳೀಯ ವ್ಯಾಪಾರಿಗಳು ಇಂತಹ ಘಟನೆಗಳು ವ್ಯಾಪಾರಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.